ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ: ಪೊಲಿಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ: ಪೊಲಿಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಕಷ್ಟ ಎದುರಾಗಿದೆ. ಆರೋಪಿಯೊಬ್ಬರನ್ನು ಸಮರ್ಥಿಸಿಕೊಂಡು ದಕ್ಷಿಣ ಕನ್ನಡ ಪೊಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ ಹಾಕಲಾದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.
ಲೈಸನ್ಸ್ ಇಲ್ಲದೆ ಗಣಿಗಾರಿಕೆ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ ಬೆದರಿಕೆ ಹಾಕಿದ್ದರು. ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.
ಪೊಲೀಸರು ಈಗಾಗಲೇ ವಿಚಾರಣಾ ನ್ಯಾಯಾಲಯದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದಾರೆ. ಹಾಗಾಗಿ, ಆರೋಪಗಳನ್ನು ಕೈಬಿಡುವಂತೆ ಕೋರಿ ಅರ್ಜಿದಾರರು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸಲಹೆ ನೀಡಿದೆ.