ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಅತ್ಯಲ್ಪ ಶಿಕ್ಷೆ ವಿಧಿಸಿದ ಟ್ರಯಲ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ಅಸಮ್ಮತಿ: ಆರೋಪಿಗೆ ಬಿತ್ತು ಭರ್ಜರಿ ದಂಡ, ಜೊತೆಗೆ ಜೈಲು ಶಿಕ್ಷೆ
ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಅತ್ಯಲ್ಪ ಶಿಕ್ಷೆ ವಿಧಿಸಿದ ಟ್ರಯಲ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ಅಸಮ್ಮತಿ: ಆರೋಪಿಗೆ ಬಿತ್ತು ಭರ್ಜರಿ ದಂಡ, ಜೊತೆಗೆ ಜೈಲು ಶಿಕ್ಷೆ
ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 86, 87 ಪ್ರಕಾರ ಆರೋಪಿಗಳಿಗೆ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ನೀಡಬಹುದು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ, ಆ ಸೆಕ್ಷನ್‌ಗಳನ್ನು ಉಲ್ಲಂಘಿಸಿ ಕಡಿಮೆ ಶಿಕ್ಷೆ ಪ್ರಕಟಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದ್ದು, ಆರೋಪಿಗೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ ಶಿವಶಂಕರ ಅಮರಣ್ಣನವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ನಿವಾಸಿ ದೇವರಾಜಾಚಾರಿ ಗಂಧದ ಮರ ಕಡಿದು ಕಳವು ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ. ಆತ ಬಡವ ಮತ್ತು ಬಡಗಿ ಎಂಬ ಕಾರಣವನ್ನು ಪರಿಗಣಿಸಿ ವಿಚಾರಣಾ ನ್ಯಾಯಾಲಯ ಆರೋಪಿಗೆ 10 ಸಾವಿರ ರೂ. ದಂಡ ಮತ್ತು ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಅಶೋಕಪುರ ಪೊಲೀಸ್ ಠಾಣೆಯನ್ನು ಪ್ರತಿನಿಧಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಸಮ್ಮತಿ ಸೂಚಿಸಿದ್ದಲ್ಲದೆ, ಆರೋಪಿಗೆ 10 ಪಟ್ಟು ದಂಡ ಹೆಚ್ಚಿಸಿದ್ದಲ್ಲದೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಗಂಧದ ಮರ ಕಳವು ಆರೋಪ ಹಾಗೂ ಅಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿಗೆ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ ಐದು ವರ್ಷಕ್ಕಿಂತ ಕಡಿಮೆ ಶಿಕ್ಷೆ ಹಾಗೂ 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ. ಇದನ್ನು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 86 ಮತ್ತು 87ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ, ವಿಚಾರಣಾ ನ್ಯಾಯಾಲಯ ಆರೋಪಿಗೆ ಸೆಕ್ಷನ್ 86 (ಗಂಧದ ಮರ ಕತ್ತರಿಸಿದ) ಅಡಿಯಲ್ಲಿ 5 ವರ್ಷ ಜೈಲು ಶಿಕ್ಷೆ ಹಾಗೂ ಕೇವಲ 10 ಸಾವಿರ ರೂ. ದಂಡ ವಿಧಿಸಿದೆ. ಸೆಕ್ಷನ್ 87 (ಗಂಧದ ಮರ ಸಂಗ್ರಹಣೆ ಯತ್ನ) ಅಡಿಯಲ್ಲಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದರೂ ಯಾವುದೇ ದಂಡ ವಿಧಿಸಿಲ್ಲ ಎಂದು ನ್ಯಾಯಪೀಠ ಗಮನಿಸಿತು.
ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 86, 87ರ ಅಡಿಯಲ್ಲಿ 50 ಸಾವಿರ ರೂ. ದಂಡ ವಿಧಿಸುವುದನ್ನು ಕಡ್ಡಾಯಗೊಳಿಸಿರುವಾಗ, ಅದಕ್ಕಿಂತ ಕಡಿಮೆ ಪ್ರಮಾಣದ ದಂಡ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿಲ್ಲ. ಹೀಗಾಗಿ, ಕಡಿಮೆ ದಂಡ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಕ್ರಮ ಒಪ್ಪಲಾಗದು ಒಂದು ನ್ಯಾಯಪೀಠ ಖಡಕ್ ಆಗಿ ಹೇಳಿದೆ.
ಜೊತೆಗೆ ಈ ಎರಡೂ ಸೆಕ್ಷನ್ ಅಡಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದ್ದು, ಕರ್ನಾಟಕ ಸರ್ಕಾರದ ಮೇಲ್ಮನವಿಯನ್ನು ಪುರಸ್ಕರಿಸಿದೆ. ಇದೇ ವೇಳೆ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.