ನೋಂದಣಿ ಪ್ರಕ್ರಿಯೆಯಲ್ಲಿ ಇ-ಖಾತಾ ಕಡ್ಡಾಯ ತೆರವಿಗೆ ಪಿಐಎಲ್: ಸರ್ಕಾರದ ವಿವರಣೆಗೆ ಹೈಕೋರ್ಟ್ ಸೂಚನೆ
ನೋಂದಣಿ ಪ್ರಕ್ರಿಯೆಯಲ್ಲಿ ಇ-ಖಾತಾ ಕಡ್ಡಾಯ ತೆರವಿಗೆ ಪಿಐಎಲ್: ಸರ್ಕಾರದ ವಿವರಣೆಗೆ ಹೈಕೋರ್ಟ್ ಸೂಚನೆ
ಎಲ್ಲ ಬಗೆಯ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿರುವ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿರುವುದನ್ನು ಆಕ್ಷೇಪಿಸಿ ಬೆಂಗಳೂರಿನ ನಿವಾಸಿ ಗೌರಿಶಂಕರ್ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ. ಕೆ.ವಿ. ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ಜಾರಿಗೊಳಿಸಿದೆ.
ಎಲ್ಲ ಬಗೆಯ ಆಸ್ತಿಗಳ ನೋಂದಣಿಗೆ ಇ-ಖಾತೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಬಿಬಿಎಂಪಿ ಈ ಬಗ್ಗೆ ಸಿದ್ಧತೆ ನಡೆಸಿಲ್ಲ. ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಲ್ಲ ಆಸ್ತಿಗಳಿಗೆ ಇ-ಖಾತಾ ಆಗಿಲ್ಲ. ಇದರಿಂದ ಆಸ್ತಿಗಳ ನೋಂದಣಿಯಲ್ಲಿ ಶೇಕಡಾ 60ರಷ್ಟು ಕುಸಿತ ಕಂಡುಬಂದಿದೆ ಎಂದು ಅರ್ಜಿದಾರರು ನ್ಯಾಯಪೀಠದ ಮುಂದೆ ವಾದಿಸಿದರು.
ಇ-ಖಾತಾ ಕಡ್ಡಾಯ ಆಗಿರುವುದರಿಂದ ಆಸ್ತಿಗಳ ಮಾರಾಟ, ಪರಭಾರೆ ಹಾಗೂ ಸಾಲದ ಮೇಲೆ ಋಣ ಕರಾರು ಮೊದಲಾದ ಕ್ರಯ-ವಿಕ್ರಯಕ್ಕೆ ಸಮಸ್ಯೆ ಉಂಟಾಗಿದೆ. ಬ್ಯಾಂಕುಗಳು ಸಾಲ ನೀಡುತ್ತಿಲ್ಲ. ಈ ವಿಚಾರವನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಬೇಕು ಎಂದು ಅರ್ಜಿದಾರರು ವಾದಿಸಿದ್ದರು.
ಎಲ್ಲ ಆಸ್ತಿಗಳಿಗೆ ಇ-ಖಾತಾ ಆಗುವ ವರೆಗೆ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸದಂತೆ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ನ್ಯಾಯಪೀಠವನ್ನು ಕೋರಿಕೊಂಡರು.
ಈ ಬಗ್ಗೆ ರಾಜ್ಯ ಸರ್ಕಾರದ ಪರವಾಗಿ ವಿವರಣೆ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ಆಕ್ಷೇಪಿಸಿರುವ ಅಂಶಗಳ ಬಗ್ಗೆ ಸರ್ಕಾರದ ಪರವಾಗಿ ವಾದ ಮಂಡಿಸಲು ಫೆಬ್ರವರಿ 3ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.