
ಕೇಂದ್ರ ಸಚಿವ ಕುಮಾರಸ್ವಾಮಿಗೆ ಸಂಕಷ್ಟ: ಎಚ್‌ಡಿಕೆ ವಿರುದ್ಧದ ಭ್ರಷ್ಟಾಚಾರ ಪ್ರಕರಣ ವಜಾ ಮಾಡಲು ಸುಪ್ರೀಂ ಕೋರ್ಟ್ ನಕಾರ
ಕೇಂದ್ರ ಸಚಿವ ಕುಮಾರಸ್ವಾಮಿಗೆ ಸಂಕಷ್ಟ: ಎಚ್‌ಡಿಕೆ ವಿರುದ್ಧದ ಭ್ರಷ್ಟಾಚಾರ ಪ್ರಕರಣ ವಜಾ ಮಾಡಲು ಸುಪ್ರೀಂ ಕೋರ್ಟ್ ನಕಾರ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎಚ್‌ಡಿಕೆ ವಿರುದ್ಧದ ಭ್ರಷ್ಟಾಚಾರ ಪ್ರಕರಣ ವಜಾ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಶ್ರೀ ದೀಪಾಂಕರ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಭ್ರಷ್ಟಾಚಾರ ಪ್ರತಿಬಂಧಕ ತಿದ್ದುಪಡಿ ಕಾಯ್ದೆಯಡಿ ತಮಗೆ ರಕ್ಷಣೆ ನೀಡಬೇಕು ಎಂದು ಕೋರಿ ಎಚ್.ಡಿ. ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.
ಬೆಂಗಳೂರಿನ ಹಲಗೆ ವಡೇರಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ಮುಂದುವರಿಕೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಈ ಮೂಲಕ ಎಚ್‌ಡಿಕೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ತಿದ್ದುಪಡಿಯಾಗಿರುವ ಭ್ರಷ್ಟಾಚಾರ ಪ್ರತಿಬಂಧಕ ತಿದ್ದುಪಡಿ ಕಾಯ್ದೆಯ ಸೆಕ್ಷನ್ 19ರ ಪ್ರಕಾಋ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ವಿಚಾರಣಾ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ನಡೆಸಲಾಗದು ಎಂದು ಎಚ್‌ಡಿಕೆ ಪರ ವಕೀಲರು ವಾದ ಮಂಡಿಸಿದ್ದರು.
ಈ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ಈ ಕಾಯ್ದೆಯನ್ನು ಪೂರ್ವಾನ್ವಯಗೊಳಿಸಲಾಗದು. ತಿದ್ದುಪಡಿಗೂ ಮುನ್ನ ನಡೆದ ಪ್ರಕರಣವಾದ ಕಾರಣಕ್ಕೆ ಈ ಪ್ರಕರಣವನ್ನು ವಜಾ ಮಾಡಲಾಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.